ಕನ್ನಡ ನಾಡು | Kannada Naadu

ಹೊಸಪೇಟೆಯಲ್ಲಿ ನಡೆದ ಸಮರ್ಪಣಾ ಸಂಕಲ್ಪ ಸಮಾವೇಶ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಕರ್ನಾಟಕ ಸರ್ಕಾರ

20 May, 2025


ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ: ಚುನಾವಣಾ ವೇಳೆ ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿ ನಮ್ಮ ಕಾಂಗ್ರೇಸ್ ಸರ್ಕಾರ  ನುಡಿದಂತೆ ನಡೆದಿದೆ. ಪಂಚ ಗ್ಯಾರಂಟೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಇದರ ಜೊತೆ ಇಂದು ಆರನೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ  ಹೊಸಪೇಟೆಯ ಸರ್ಕಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ “ಸಾಧನಾ ಸಮಾವೇಶ” ಸಮಾರಂಭದಲ್ಲಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದ ಮುಖ್ಯಮಂತ್ರಿಗಳು ಚುನಾವಣೆಯ ಸಮಯದಲ್ಲಿ ಪ್ರಣಾಳಿಕೆಯಲ್ಲಿ ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ. ಈಗ ಐದು ಗ್ಯಾರಂಟೆಗಳ ಜೊತೆ ಆರನೇ ಗ್ಯಾರಂಟಿಯಾಗಿ ಭೂ ಮಾಲಿಕತ್ವ ನೀಡುವ ಗ್ಯಾರಂಟಿಯನ್ನು ಜಾರಿಗೆ ತರಲಾಗಿದೆ. ಅದರ ನಿದರ್ಶನವಾಗಿ ಇಂದು 1,11,111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ತಿಳಿಸಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ಮ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆ.  ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by