ಕನ್ನಡ ನಾಡು | Kannada Naadu

BIFFes  2025ರ  ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಕಿಶೋರ್‌ ನೇಮಕ

27 Feb, 2025

 

ಬೆಂಗಳೂರು:  BIFFES ಬೆಂಗಳೂರಿನಲ್ಲಿ 2025ರ ಮಾರ್ಚ್ 1 ರಿಂದ 8ರವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ದಕ್ಷಿಣ ಭಾರತ ಹಾಗೂ ಕನ್ನಡದ ಜನಪ್ರಿಯ ನಟ ಕಿಶೋರ್‌ ನೇಮಕಗೊಂಡಿದ್ದಾರೆ.

ಕರ್ನಾಟಕ ಸರ್ಕಾರ ಆದೇಶದಂತೆ ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್ ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ​

2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ " ನಟ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

​ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ ಎಫ್‌ಐಎಪಿಎಫ್‌ ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ನಡೆಯಲಿದೆ. ಇದರೊಂದಿಗೆ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ರೂಪಿಸಲಾಗಿದ್ದು, ಇದರ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಸೂಕ್ತ ಮಾರ್ಗದರ್ಶನದಲ್ಲಿ ಈ ಬಾರಿಯ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅರ್ಥಪೂರ್ಣವಾಗಿ ಮುನ್ನಡೆಸಲು ತಿರ್ಮಾನಿಸಿದ್ದಾರೆ. ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಲಾಗಿದೆ. 

 

Publisher: ಕನ್ನಡ ನಾಡು | Kannada Naadu

Login to Give your comment
Powered by