ಕನ್ನಡ ನಾಡು | Kannada Naadu

ಪದವಿ ಕಾಲೇಜುಗಳ ಪ್ರಾಂಶುಪಾಲರ ಖಾಲಿ ಹುದ್ದೆಗಳ ಭರ್ತಿಗೆ  ಹಾಗೂ ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ: - ಸಚಿವ ಡಾ:ಎಂ.ಸಿ.ಸುಧಾಕರ್

13 Mar, 2025

 

ಬೆಂಗಳೂರು :  

ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ  ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಸರ್ಕಾರಕ್ಕೆ ಸಲ್ಲಿಸಿರುವ ಅಂತಿಮ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ (ವಿಶೇಷ) ನಿಯಮಗಳು 2020ರ ನಿಯಮ 4ರನ್ವಯ ಕಾಲೇಜು ಶಿಕ್ಷಣ ಆಯುಕ್ತರ ಅಧ್ಯಕ್ಷತೆಯಲ್ಲಿನ ಆಯ್ಕೆ ಪ್ರಾಧಿಕಾರವು ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ/ಮೀಸಲಾತಿ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದೆ. ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿಯಲ್ಲಿ ದಾಖಲಿಸಿದ್ದ ಮಾಹಿತಿಗಳಿಗನುಗುಣವಾಗಿ ವಿದ್ಯಾರ್ಹತೆ, ಮೀಸಲಾತಿ ಮತ್ತಿತರೆ ಅಗತ್ಯ ದೃಢೀಕೃತ ಪ್ರತಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದರು.

ಪ್ರಸ್ತುತ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಆಯಾ ಕಾಲೇಜುಗಳ ಉಪನ್ಯಾಸಕರು ಸೇವಾ ಜೇಷ್ಟತೆಯಲ್ಲಿ ಹಿರಿಯರಾದವರನ್ನು ಪ್ರಾಂಶುಪಾಲರ ಪ್ರಭಾರದಲ್ಲಿ ಇರಿಸಲು ಕ್ರಮ ವಹಿಸಲಾಗಿದೆ. ಕಾಲೇಜಿನ ದೈನಂದಿನ ಆಡಳಿತ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ.ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಘವೇಂದ್ರ ಬಸವರಾಜ್ ಹಿಟ್ನಾಳ್ ಕೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಕಾಲಾಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2000 ಹುದ್ದೆಗಳ ಭರ್ತಿಗೆ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿರುತ್ತವೆ. ಅದರಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ. ಅರಸೀಕೆರೆ ಮತ್ತು ದೇವದುರ್ಗ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ.  ಹೊಸ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು  11-07-2024ರಲ್ಲಿ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ವರದಿಯನುಸಾರ ಮುಂದಿನ ಕ್ರಮ ವಹಿಸಲಾಗುವುದು ಎಂದರು. ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.  ತಳಕಲ್ ನಲ್ಲಿ ವಿಟಿಯು ನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.  

Publisher: ಕನ್ನಡ ನಾಡು | Kannada Naadu

Login to Give your comment
Powered by