ಬೆಂಗಳೂರು :ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿವೆ ಎಂದು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು,ಅಭಿವೃದ್ಧಿ ಯೋಜನೆಗಳು,ಸರ್ಕಾರದ ಸಾಧನೆಗಳನ್ನು ಜನತೆಯ ಮುಂದಿಟ್ಟಿದ್ದಾರೆ.
ಮಾಣಿಕ್ಷಾ ಪರೇಡದ ಮೈದಾನದಲ್ಲಿ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಿನ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು,ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿವೆ. 2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆರಂಭಿಸಿದ್ದು, ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್ಪುಗಳ ಮೂಲಕ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದನ್ನು ಇತ್ತೀಚೆಗೆ ಆಚರಣೆ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಜನರಿಗೆ ತಲುಪುವ ಈ ಯೋಜನೆಗಳು ರಾಜ್ಯದ ಜನರ ತಲಾದಾಯವನ್ನು ಹೆಚ್ಚಿಸುತ್ತಿರುವುದಲ್ಲದೆ ಕಾರ್ಮಿಕ ಶಕ್ತಿಯಲ್ಲಿಮಹಿಳೆಯರ ಭಾಗವಹಿಸುವಿಕೆಯನ್ನು ಶೇ.23 ರಷ್ಟು ಹೆಚ್ಚಿಸಿವೆ ಎಂದು ಹಲವು ಅಧ್ಯಯನಗಳು ಹೇಳುತ್ತಿವೆ. ನಾವು ಶಕ್ತಿ ಯೋಜನೆಯನ್ನು ಜಾರಿಗೊಳಿಸುವುದರ ಜೊತೆಗೆ ಸಾರಿಗೆ ಇಲಾಖೆಗೆ ವಿವಿಧ ಮಾದರಿಯ ವಾಹನಗಳು ಸೇರಿದಂತೆ ಒಟ್ಟು 5,049 ಹೊಸ ಬಸ್ಸುಗಳ ಖರೀದಿ ಮತ್ತು 8,473 ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದೇವೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.
ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಸಹಾಯಧನ, ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ, ಸಾಮಾಜಿಕ ಯೋಜನೆಗಳಿಗಾಗಿ ವಿನಿಯೋಗಿಸುತ್ತಿರುವ ಪಿಂಚಣಿ ಮುಂತಾದವುಗಳಿಗಾಗಿ 1.12 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಜನ ಕಲ್ಯಾಣಕ್ಕಾಗಿ ಖರ್ಚು ಮಾಡುತ್ತಿದೆ ಎಂದು ವಿರೋಧ ಪಕ್ಷಗಳ ಆರೋಪ ತಿರುಗೇಟು ನೀಡಿದರು.
ದೇಶದ ಪ್ರಮುಖ ಸಂಸ್ಥೆಗಳು ಮಾಡಿರುವ ಸಮೀಕ್ಷೆಗಳ ಪ್ರಕಾರ ಶೇ.10ರಷ್ಟಿರುವ ಶ್ರೀಮಂತರ ಬಳಿ ಶೇ.80ರಷ್ಟು ಸಂಪತ್ತು ಶೇಖರಣೆಯಾಗಿದೆ. ಆದರೆ ಶೇ. 10 ಜನ ಕೇವಲ ಶೇ.3ರಷ್ಟು ಮಾತ್ರ ಜಿಎಸ್ಟಿ ಪಾವತಿಸುತ್ತಿದ್ದರೆಂದು ಅಧ್ಯಯನಗಳು ಹೇಳುತ್ತಿವೆ. ಉಳಿದ ಶೇ.90ರಷ್ಟು ಜನ ಹೊಟ್ಟೆ-ಬಟ್ಟೆಗೆ ದುಡಿಯುವವರಾದ್ದರಿಂದ ಶೇ.97 ರಷ್ಟು ಜಿಎಸ್ಟಿ ಪಾವತಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಯಾವ ಆರ್ಥಿಕತೆ ಮುಂದುವರೆಯಲು ಸಾಧ್ಯ? ಸಂವಿಧಾನದ ಆಶಯಗಳನ್ನು ಈಡೇರಿಸುವುದು ಹೇಗೆ? ಬೃಹದಾಕಾರವಾಗಿ ಬೆಳೆಯುತ್ತಿರುವ ಅಸಮಾನತೆಯನ್ನು ತಗ್ಗಿಸುವುದು ಹೇಗೆ? ಎಂಬ ಪ್ರಶ್ನೆಗಳು ನಮ್ಮನ್ನು ಬಾಧಿಸಲಾರಂಭಿಸಿದವು. ಈ ಬೃಹತ್ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರೆ ಜನ ಕಲ್ಯಾಣದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದರು.
ಬಲಾಢ್ಯರು ಮಾತ್ರ ಬದುಕಬೇಕು ಉಳಿದವರು ಗುಲಾಮರಾಗಿ ಬಲಾಢ್ಯರಿಗಾಗಿ ದುಡಿಯಬೇಕು ಎನ್ನುವ ಮನುವಾದಿ ಸಿದ್ಧಾಂತದ ಮಾದರಿಯೇ ಸಾಮಾಜಿಕ ಡಾರ್ವಿನ್ವಾದ. ಈ ಮೃಗೀಯ ಸಿದ್ಧಾಂತಕ್ಕೆ ಎದುರಾಗಿ ಅಸಹಾಯಕರಿಗೆ ಮೊದಲು ಆದ್ಯತೆ ಸಿಗಬೇಕು ಎನ್ನುವುದು ನಮ್ಮ ಸಂವಿಧಾನವಾದ. ಆದ್ದರಿಂದ ನಾವು ಸಂವಿಧಾನದ ಉಳಿವಿಗಾಗಿ ಪಣ ತೊಡೋಣ ಎಂದು ಸಿಎಂ ಕರೆ ನೀಡಿದರು.
ಜನರ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಸಮರ್ಪಕವಾದ ಅಂಕಿ-ಅಂಶಗಳು ಮಾತ್ರ ಜನರ ಬದುಕಿನ ಗತಿಯನ್ನು ಬದಲಾಯಿಸಲು ಕಾರಣವಾಗಬಲ್ಲವು. ನಮ್ಮ ಮೊದಲ ಆದ್ಯತೆ ಅಂಕಿ-ಅಂಶಗಳ ಸಂಗ್ರಹ. ಆ ನಂತರ ರೂಪಿಸುವ ಯೋಜನೆಗಳಲ್ಲಿ ವಿಶೇಷ ಪ್ರಾತಿನಿಧ್ಯ ಕೊಡಬೇಕಾಗುತ್ತದೆ. ಹಾಗೆ ಮಾಡದಿದ್ದರೆ ನಾವು ನಮ್ಮ ಸಂವಿಧಾನಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಅನ್ಯಾಯ ಮಾಡುತ್ತಿದ್ದೇವೆ ಎಂದು ಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿಯೆ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವಿಚಾರಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಉತ್ತಮವಾದ ಮುಂಗಾರು ಮಳೆಯಾಗುತ್ತಿದೆ. ಅಣೆಕಟ್ಟೆಗಳು ತುಂಬಿವೆ. ರೈತರ ಮುಖದಲ್ಲಿ ಮಂದಹಾಸವಿದೆ.ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. 2024-25ರಲ್ಲಿ ಕೂಡ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ಬೆಳೆಯಲಾಗಿದೆ. ಹಿಂದಿನ ಸರ್ಕಾರವು ಎಪಿಎಂಸಿಗಳನ್ನು ಖಾಸಗೀಕರಿಸಿ ರೈತರ ಬದುಕನ್ನು ಕಾರ್ಪೊರೇಟ್ ಬಂಡವಾಳಿಗರ ಕೈಗೆ ಕೊಡಲು ಹೊರಟಿತ್ತು. ಆದರೆ, ನಮ್ಮ ಸರ್ಕಾರವು ಎಪಿಎಂಸಿಗಳನ್ನು ಬಲಿಷ್ಠಗೊಳಿಸಿದ ಕಾರಣ 2024-25 ರಲ್ಲಿ 164 ಲಕ್ಷ ಮೆಟ್ರಿಕ್ ಟನ್ನುಗಳಷ್ಟು ಕೃಷಿ ಉತ್ಪನ್ನಗಳು ಆವಕವಾಗಿದ್ದು ಶೇ. 447 ರಷ್ಟು ಹೆಚ್ಚಿನ ಪ್ರಮಾಣವಾಗಿದೆ. ಇದು ರಾಜ್ಯದ ಎ.ಪಿ.ಎಂ.ಸಿ.ಗಳ ಇತಿಹಾಸದಲ್ಲಿಯೇ ದಾಖಲೆಯಾಗಿದೆ ಎಂದರು.
ಪ್ರೊ.ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ಇತ್ತೀಚೆಗೆ ತನ್ನ ವರದಿಯನ್ನು ನೀಡಿದೆ. ಪೂರ್ಣ ಪ್ರಮಾಣದಲ್ಲಿ ರಾಜ್ಯದ್ದೆ ಆದ ಶಿಕ್ಷಣ ನೀತಿಯು ಸಿದ್ಧಪಡಿಸಲು ಕ್ರಮವಹಿಸಿರುವುದು ಇದೇ ಮೊದಲು. ವರದಿಯನ್ನು ಗಂಭೀರವಾಗಿ ಪರಿಶೀಲಿಸಿ ಅದರ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
2027ರ ವೇಳೆಗೆ ಎತ್ತಿನ ಹೊಳೆ ಯೋಜನೆಯನ್ನೂ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದ್ದೇವೆ. ನೀರಾವರಿ ಕ್ಷೇತ್ರದಲ್ಲಿಯೂ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು ನಾವು ಚುನಾವಣೆಗೆ ಮೊದಲು ಹೇಳಿದ್ದ ಆಶ್ವಾಸನೆಗಳನ್ನು ಈಡೇರಿಸಲು ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸಿಎಂ ಭರವಸೆ ನೀಡಿದರು.
ವಿವಿಧ ವಸತಿ ಯೋಜನೆಗಳಡಿಯಲ್ಲಿ ಜೂನ್-2025ರ ಅಂತ್ಯದವರೆಗೆ 3,87,756 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ರಾಜ್ಯಾದ್ಯಂತ 26 ವಸತಿ ಯೋಜನೆಗಳು ಪ್ರಗತಿಯಲ್ಲಿವೆ,ಚುನಾವಣೆಗೆ ಮೊದಲು ನೀಡಿದ್ದ ಭರವಸೆಯಂತೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಸಾಧ್ಯವಾಗಿಸಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿವರ್ಷ 5,000 ಕೋಟಿ ರೂ.ಗಳನ್ನು ಒದಗಿಸಿ ಶಿಕ್ಷಣ, ಆರೋಗ್ಯ, ಕೈಗಾರಿಕಾಭಿವೃದ್ಧಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. 7 ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಪ್ರದೇಶದ 1150 ಕಿ.ಮೀ. ರಸ್ತೆಗಳನ್ನು “ಕಲ್ಯಾಣ ಪಥ” ಕಾರ್ಯಕ್ರಮದಡಿ 1.000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ರಾಜ್ಯದ ಅಭಿವೃದ್ಧಿ ಪಥದ ಸಮಗ್ರ ವಿವರ ನೀಡಿದರು.
ಇಂದು ವೈದ್ಯಕೀಯ ಶುಲ್ಕಗಳು ದುಬಾರಿಯಾಗುತ್ತಿದ್ದು ಬಡ ಮಧ್ಯಮ ವರ್ಗದವರಿಗೆ ಉತ್ತಮ ವೈದ್ಯಕೀಯ ಸೇವೆಗಳು ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವಾರು ಉಪಕ್ರಮಗಳನ್ನು ಸಾಧಿಸಿದ್ದು ಇವು ಜನಮೆಚ್ಚುಗೆ ಗಳಿಸಿಕೊಂಡಿವೆ. ಬಿಮ್ಸ್ ಬೆಳಗಾವಿಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕಾಮಗಾರಿ ಪೂರ್ಣಗೊಂಡಿರುತ್ತದೆ. ಕಲಬುರಗಿಯಲ್ಲಿ 371 ಹಾಸಿಗೆ ಸಾಮಥ್ರ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನೆ ಸಂಸ್ಥೆಯನ್ನು 304 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗದಗದಲ್ಲಿ ಕ್ಯಾಥ್ ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಘಟಕವನ್ನು ಪ್ರಾರಂಭಿಸಲಾಗಿದೆ ಎಂದರು.
ಆರೋಗ್ಯ ಇಲಾಖೆಯಲ್ಲಿ ನಮ್ಮ ಸರ್ಕಾರವು ಹಲವಾರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ, ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಕ್ಯಾನ್ಸರ್ ರೋಗಿಗಳ ಪ್ರಯಾಣ ಮತ್ತು ಚಿಕಿತ್ಸೆಯ ಹೊರೆ ಕಡಿಮೆ ಮಾಡಲು ಹಬ್ ಮತ್ತು ಸ್ಕೋಪ್ ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಆಂಬ್ಯುಲೆನ್ಸ್ ಸೇವೆಗಳನ್ನು ರಾಜ್ಯಾದ್ಯಂತ ಕೇಂದ್ರೀಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ನಿರ್ವಹಿಸುವಂತೆ ಮಾಡಲು ತೀರ್ಮಾನಿಸಿದ್ದೇವೆ. ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಟಿಯಲ್ಲಿ ಕಲಬೆರಕೆ ಮತ್ತು ಜನರ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಆಹಾರಗಳನ್ನು ವಿಶ್ಲೇಷಣೆಗೆ ಒಳಪಡಿಸಿ ಅವುಗಳನ್ನು ನಿಷೇಧಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದರು.
ಕರ್ನಾಟಕ ರಾಜ್ಯವು 2023-24ನೇ ಸಾಲಿನಲ್ಲಿ 54,427 ಕೋಟಿ ರೂ. ವಿದೇಶಿ ಹೂಡಿಕೆ ಆಕರ್ಷಿಸಿ, ದೇಶದಲ್ಲಿ 3ನೇ ಸ್ಥಾನದಲ್ಲಿದ್ದು, 2024-25ನೇ ಸಾಲಿನಲ್ಲಿ 56,030 ಕೋಟಿ ರೂ. ವಿದೇಶಿ ಹೂಡಿಕೆ ಆರ್ಕರ್ಷಿಸುವುದರೊಂದಿಗೆ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.
Publisher: ಕನ್ನಡ ನಾಡು | Kannada Naadu