ಸಾಗರ: ಶಿವಮಗ್ಗ ಜಿಲ್ಲೆಯ ಪ್ರಸಿದ್ಧ ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಇಂದು ಪಾಲ್ಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ದೀರ್ಘಕಾಲದ ಮಧುಮೇಹ ಮತ್ತು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯ ಡಾ. ವಿಕ್ರಮ್ ನೇತೃತ್ವದಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಂಡಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನೆಚ್ಚಿನ ನಾಯಕನ ಅಸ್ವಸ್ಥತೆಯ ಸುದ್ದಿ ತಿಳಿದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಸ್ಪತ್ರೆಯತ್ತ ಧಾವಿಸಿದ್ದಾರೆ.
