ಕನ್ನಡ ನಾಡು | Kannada Naadu

ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದಲ್ಲಿ ಅಪಘಾತ: ಮೂವರ ಸಾವು

07 Apr, 2024


ಚಿತ್ರದುರ್ಗ :  ಬೆಂಗಳೂರಿನಿಂದ ಗೋಕರ್ಣಕ್ಕೆ ವೇಗವಾಗಿ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ,೩೮ ಮಂದಿ ಗಾಯಗೊಂಡಿರುವ ದಾರುಣ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಗಣಪತಿ(೪೦) ಹಾಗೂ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಜಗದೀಶ್ ಮೃತಪಟ್ಟವರು.
ಮತ್ತಿಬ್ಬರು ಮೃತರ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಗಾಯಗೊಂಡಿರುವ ೩೮ ಮಂದಿ ಪ್ರಯಾಣಿಕರಲ್ಲಿ ೮ ಮಂದಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶವಾಗಾರಕ್ಕೆ ರವಾನಿಸಲಾಗಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ವೇಗವಾಗಿ ಹೋಗುತ್ತಿದ್ದ ಐವತ್ತು ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಮುಂಜಾನೆ ಹೊಳಲ್ಕೆರೆಯ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಅಪಘಾತಕ್ಕೆ ಕಾರಣವೆಂದು ಅಪಘಾತದ ಬಳಿಕ ಆಕ್ರೋಶಗೊಂಡಿರುವ ಸ್ಥಳೀಯರು ಆರೋಪಿಸಿದ್ದಾರೆ.ಅಪಘಾತದಲ್ಲಿ ಮೃತರ ಕುಟುಂಬದವರು ಸಂಬಂಧಿಕರ ಕಣ್ಣೀರು ಆಕ್ರಂದನ ಮುಗಿಲುಮುಟ್ಟಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by